Showing posts with label ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ. Show all posts
Showing posts with label ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ. Show all posts

Saturday, February 8, 2014

ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ

ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ 
ತೇಲಿ ಸಾಗುವ ಮುಗಿಲು ಹರುಷ ಉಕ್ಕಿ 
ಯಾರು ಇಟ್ಟರು ಇದನು ಹೀಗೆ ಇಲ್ಲಿ 
ತುದಿ ಮೊದಲು ತಿಳಿಯದೀ ನೀಲಿಯಲಿ

ಒಂದೊಂದು ಹೂವಿಗು ಒಂದೊಂದು ಬಣ್ಣ 
ಒಂದೊಂದು ಜೀವಕು ಒಂದೊಂದು ಕಣ್ಣ 
ಯಾವುದೋ ಬಗೆಯಲ್ಲಿ ಎಲ್ಲರಿಗು ಅನ್ನ
ಕೊಟ್ಟ ಕರುಣೆಯ ಮೂಲ ಮರೆಸಿಹುದು ತನ್ನ

ನೂರಾರು ನದಿ ಕುಡಿದು ಮೀರದ ಕಡಲು 
ಭೋರೆಂದು ಸುರಿಸುರಿದು ಆರದ ಮುಗಿಲು
ಸೇರಿಯೂ ಕೋಟಿ ತಾರೆ ತುಂಬದಾ ಬಯಲು 
ಯಾರದೀ ಮಾಯೆ ಯಾವ ಬಿಂಬದಾ ನೆರಳು

ಹೊರಗಿರುವ ಪರಿಯೆಲ್ಲ ಅಡಗಿಹುದೇ ಒಳಗೆ 
ಹುಡುಕಿದರೆ ಕೀಲಿಕೈ ಸಿಗದೇ ಎದೆಯೊಳಗೆ 
ತಿಳಿಯದೆ ಅದರಲ್ಲಿ ಕುಳಿತಿರುವೆ ನೀನೆ 
ಎನ್ನುವರು ನನಗೀಗ ಸೋಜಿಗವು ನಾನೇ

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

Tuesday, December 10, 2013

ಇಷ್ಟು ಕಾಲ ಒಟ್ಟಿಗಿದ್ದು ...

ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ

ಕಡಲ ಮೇಲೆ ಸಾವಿರಾರು ಮೈಲಿ ಸಾಗಿಯೂ
ನೀರಿನಾಳ ತಿಳಿಯಿತೇನು ಹಾಯಿ ದೋಣಿಗೆ

ಸದಾ ಕಾಲ ತಬ್ಬುವಂತೆ ಮೇಲೆ ಬಾಗಿಯೂ
ಮಣ್ಣ ಮುತ್ತು ದೊರಕಿತೇನು ನೀಲಿ ಬಾನಿಗೆ

ಸಾವಿರಾರು ಮುಖದ ಚೆಲುವ ಹಿಡಿದು ತೋರಿಯೂ
ಒಂದಾದರೂ ಉಳಿಯಿತೆ ಕನ್ನಡಿಯ ಪಾಲಿಗೆ

ಎನ್.ಎಸ್. ಲಕ್ಷ್ಮೀನಾರಾಯಣ ಭಟ್
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

Friday, November 1, 2013

ನನ್ನ ಇನಿಯನ ನೆಲೆಯ ಬಲ್ಲೆಯೇನೆ

ನನ್ನ ಇನಿಯನ ನೆಲೆಯ ಬಲ್ಲೆಯೇನೆ
ಹೇಗೆ ತಿಳಿಯಲಿ ಅದನು ಹೇಳೇ ನೀನೆ

ಇರುವೆ ಸರಿಯುವ ಸದ್ದು
ಮೊಗ್ಗು ಬಿರಿಯುವ ಸದ್ದು
ಮಂಜು ಇಳಿಯುವ ಸದ್ದು ಕೇಳಬಲ್ಲ
ನನ್ನ ಮೊರೆಯನು ಏಕೆ ಕೇಳಲೊಲ್ಲ

ಗಿರಿಯ ಎತ್ತಲು ಬಲ್ಲ
ಶರಧಿ ಬತ್ತಿಸಬಲ್ಲ
ಗಾಳಿ ಉಸಿರನೆ ಕಟ್ಟಿ ನಿಲಿಸಬಲ್ಲ
ನನ್ನ ಸೆರೆಯನು ಏಕೆ ಬಿಡಿಸಲೊಲ್ಲ

ನೀರು ಮುಗಿಲಾದವನು
ಮುಗಿಲು ಮಳೆಯಾದವನು
ಮಳೆ ಬಿದ್ದು ತೆನೆಎದ್ದು ತೂಗುವವನು
ನಲ್ಲೆ ಅಳಲನು ಏಕೆ ತಿಳಿಯನವನು

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

Sunday, October 27, 2013

ಎಲ್ಲಿ ಜಾರಿತೋ ಮನವು ...

ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ

ದೂರದೊಂದು ತೀರದಿಂದ 
ತೇಲಿ ಪಾರಿಜಾತ ಗಂಧ
ದಾಟಿ ಬಂದು ಬೇಲಿಸಾಲ
ಪ್ರೀತಿ ಹಳೆಯ ಮಧುರ ನೋವ

ಬಾನಿನಲ್ಲಿ ಒಂಟಿ ತಾರೆ
ಸೋನೆ ಸುರಿವ ಇರುಳ ಮೊರೆ
ಕತ್ತಲಲ್ಲಿ ಕುಳಿತು ಒಳಗೆ 
ಬಿಕ್ಕುತಿಹಳು ಯಾರೋ ನೀರೆ

ಹಿಂದೆ ಯಾವ ಜನ್ಮದಲ್ಲೋ
ಮಿಂದ ಪ್ರೇಮ ಜಲದ ಕಂಪು
ಬಂದು ಚೀರುವೆದೆಯ ಭಾವ
ಹೇಳಲಾರೆ ತಾಳಲಾರೆ

ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ,
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ.
ಎಲ್ಲಿ ಜಾರಿತೋ, ಎಲ್ಲೆ ಮೀರಿತೋ, ಇಲ್ಲದಾಯಿತೋ...

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ