Showing posts with label ದ.ರಾ. ಬೇಂದ್ರೆ. Show all posts
Showing posts with label ದ.ರಾ. ಬೇಂದ್ರೆ. Show all posts

Tuesday, September 1, 2015

ಎತ್ತರಕ್ಕೇರಿದವರ ಅಂತಃಕರಣ

ಒಂದು ದಿನ ಡಾ. ದ.ರಾ ಬೇಂದ್ರೆ ಹಾಗೂ ಸುರೇಶ ಕುಲಕರ್ಣಿಯವರು ಕುದುರೆಗಾಡಿ ಮಾಡಿಕೊಂಡು ದತ್ತಾತ್ರೇಯ ಗುಡಿಗೆ ಹೋದರು. ದೇವರಿಗೆ ನಮಸ್ಕಾರ ಮಾಡಿ ಹೊರಗೆ ಬಂದಾಗ ಕುದುರೆಗಾಡಿ ಇರಲಿಲ್ಲ. `ಮತ್ತೊಂದು ಗಾಡಿ ತೆಗೆದುಕೊಂಡು ಬರಲಾ' ಎಂದು ಕೇಳಿದಾಗ, `ಬೇಡ ನಡೆದೇ ಮುಂದೆ ಹೋಗೋಣ. ಅಲ್ಲಿಯೇ ಟಾಂಗಾ (ಕುದುರೆಗಾಡಿ) ಸಿಗುತ್ತದೆ' ಎಂದರು ಬೇಂದ್ರೆ. ಇಬ್ಬರೂ ನಡೆದು ಕೆ ಸಿ ಸಿ ಬ್ಯಾಂಕಿನ ಹತ್ತಿರ ಬಂದರು. ಅಲ್ಲೊಬ್ಬ ರಸ್ತೆಯ ಬದಿಯಲ್ಲಿ ಚಪ್ಪಲಿ ಹೊಲಿಯುತ್ತ ಕುಳಿತಿದ್ದ. ಇವರ ಚಪ್ಪಲಿಯ ಉಂಗುಷ್ಠ ಹರಿದದ್ದನ್ನು ನೋಡಿ, `ಅಜ್ಜಾವ್ರ, ಉಂಗುಷ್ಠ ಹಚ್ಚಿಕೊಡತೇನಿ ಕೊಡ್ರಿ' ಎಂದ. `ಆತು ಹಚ್ಚಿಕೊಡು' ಎಂದು ಅವನ ಕಡೆಗೆ ಹೋದರು. ತಮ್ಮ ಚಪ್ಪಲಿ ತೆಗೆದುಕೊಡುವಾಗ ಆ ರಿಪೇರಿ ಮಾಡುವವ ಹೇಳಿದ, `ಬಿಸಲಾಗ ಕಾಲು ಸುಡತಾವ, ಇದರ ಮೇಲೆ ಕಾಲು ಇಡ್ರಿ' ಎಂದು ಮತ್ತೊಂದು ಚಪ್ಪಲಿಯನ್ನು ಅವರ ಕಾಲಿನ ಹತ್ತಿರ ಇಟ್ಟ. ಅವನ ಪ್ರೀತಿ ಕಂಡು ಬೇಂದ್ರೆಯವರಿಗೆ ಅಂತಃಕರಣ ತುಂಬಿ ಬಂತು. `ಅಲ್ಲೋ ನನ್ನ ಕಾಲು ಸುಡೋದರ ಬಗ್ಗೆ ನಿನಗೆ ಕಾಳಜಿ ಅದ. ಆದರೆ ಸುಡೋ ಬಿಸಿಲೊಳಗ ನೀನು ಕೂತಿ. ನಿನ್ನ ಮೈ ಸುಡೋದರ ಬಗ್ಗೆ ಎಚ್ಚರ ಇಲ್ಲಾ' ಎಂದು ತಮ್ಮ ಕೊಡೆಯನ್ನು ಬಿಚ್ಚಿ ಅವನ ತಲೆಯ ಮೇಲೆ ಹಿಡಿದು ನಿಂತರು. ಆತ ಇವರ ಚಪ್ಪಲಿ ರಿಪೇರಿ ಮಾಡುತ್ತಿದ್ದ. ಅದು ಮುಗಿದ ಮೇಲೆ, `ಪಾಲೀಶ್ ಮಾಡಲೇನ್ರಿ?' ಎಂದು ಕೇಳಿದ. ಇವರು `ಹೂಂ' ಎಂದು ಮಾತಿಗಿಳಿದು ಅವನ ಮನೆತನದ ಇತಿಹಾಸವನ್ನೆಲ್ಲ ತಿಳಿದರು.

ಎಷ್ಟು ಮಕ್ಕಳು ನಿನಗ?

ಎರಡು

ದಿನಕ್ಕ ಎಷ್ಟು ಹಣ ದುಡಿತೀ?

ಹತ್ತು ರೂಪಾಯಿ, ಒಮ್ಮಮ್ಮೆ ಹೆಚ್ಚು ಕಡಿಮೆ ಆಗತೈತಿ .

ಶೆರೆ ಕುಡಿತೀ ಏನು?

ಇಲ್ಲ, ಯಾವಾಗರೇ ಒಮ್ಮಮ್ಮೆ .

ಮನ್ಯಾಗ ಛತ್ರಿ (ಕೊಡೆ) ಅದ ಏನು?

ಇದೇರಿ

ಇಷ್ಟು ಮಾತು ಆಗುವುದರೊಳಗೆ ಚಪ್ಪಲಿ ರಿಪೇರಿ ಕೆಲಸ ಮುಗಿದಿತ್ತು. ` ಎಷ್ಟು ಆತು?' ಬೇಂದ್ರೆ ಕೇಳಿದರು.

ಆತ ಕ್ಷಣ ವಿಚಾರ ಮಾಡಿ, `ಒಂದೂವರೆ ರೂಪಾಯಿ ಆತ್ರಿ' ಎಂದ. ಇವರು ಹತ್ತು ರೂಪಾಯಿ ತೆಗೆದು ಕೊಟ್ಟರು. ಆತ `ನನ್ನ ಕಡೆಗೆ ಚಿಲ್ರೆ ಇಲ್ಲರಿ' ಎಂದಾಗ ಬೇಂದ್ರೆ, `ನೀನು ದಿನಕ್ಕೆ ಹತ್ತು ರೂಪಾಯಿ ದುಡೀತಿ. ಇದು ಇವತ್ತಿನ ಗಳಿಕೆ. ಮೊದಲು ಮನೆಗೆ ಹೋಗಿ ಕೊಡೆ ತೊಗೊಂಡು ಬಾ. ನೆರಳು ಮಾಡಿಕೊಂಡು ದುಡಿ. ನಿನ್ನ ಹಿಂದ ಹೆಂಡತಿ ಮಕ್ಕಳು ಅವಲಂಬಿಸಿದ್ದಾರೆ ಎಂಬುದನ್ನು ಮರೀಬ್ಯಾಡ. ಅವರಿಗೆ ಹಣ್ಣು ಹಂಪಲು ಒಯ್ಯಿ, ಕುಡೀಬ್ಯಾಡಾ' ಎಂದರು. ಅವರ ಅಂತಃಕರಣದ ಮಾತಿಗೆ, ನೀಡಿದ ಹಣಕ್ಕೆ ಅವನ ಕಣ್ಣು ಒದ್ದೆಯಾದವು.

ಆತ ಕೇಳಿದ, `ಅಜ್ಜಾವ್ರ, ನಿಮ್ಮ ಮನೆ ಎಲ್ಲಿ ಐತಿ?'. `ಸಾಧನಕೇರಿಯೊಳಗ' ಎಂದರು ಬೇಂದ್ರೆ.. `ಬೇಂದ್ರೆಯವರ ಮನೀ ಹತ್ತಿರ ಏನ್ರಿ?' ಎಂದು ಕೇಳಿದ.

ಇವರು `ಹೂಂ' ಎನ್ನುತ್ತ ಟಾಂಗಾ ನಿಲ್ದಾಣದ ಕಡೆಗೆ ನಡೆದರು. ಅನಂತರ ಆ ಚಪ್ಪಲಿ ರಿಪೇರಿ ಮಾಡುವವ ಆಗಾಗ ಬೇಂದ್ರೆಯವರ ಮನೆಗೆ ಬಂದು ಹೋಗುತ್ತಿದ್ದನಂತೆ.

ನಿಜವಾಗಿಯೂ ಎತ್ತರಕ್ಕೇರಿದವರು ಯಾವ ಹಂತಕ್ಕಾದರೂ ಇಳಿದು ಹೃದಯವಂತಿಕೆಯನ್ನು ತೋರಬಲ್ಲರು.

ಇದನ್ನು ಸುರೇಶ ಕುಲಕರ್ಣಿಯವರು ತಮ್ಮ `ಬೇಂದ್ರೆ ಬೆಳಕು' ಕೃತಿಯಲ್ಲಿ ಬರೆದಿದ್ದಾರೆ. ಇದರ ಬೆಳಕು ನಮಗೆ ಕಂಡಿದ್ದು ಡಾ. ಗುರುರಾಜ ಕರ್ಜಗಿ ಅವರ ಪ್ರಜಾವಾಣಿಯ ‘ಕರುಣಾಳು ಬಾ ಬೆಳಕೆ’ ಅಂಕಣದಲ್ಲಿ.

ಬೇಂದ್ರೆ ಅಜ್ಜನಿಗೆ, ಇದನ್ನು ನಮಗೆ ಉಣಬಡಿಸಿದ ಸುರೇಶ್ ಕುಲಕರ್ಣಿ ಮತ್ತು ಡಾ. ಗುರುರಾಜ ಕರ್ಜಗಿ ಅವರಿಗೆ ನಮಿಸೋಣ.

ಮೂಲ: ಅಂತರ್ಜಾಲ

Friday, December 5, 2014

ನಾಕು ತಂತಿ

ಹಲವು ವರ್ಷಗಳಿಂದ ವಿಚಿತ್ರವಾದ ಅನುಭವದೊಂದಿಗೆ ಅಪೂರ್ಣವಾಗಿ ಅರ್ಥವಾಗುತ್ತಿದ್ದ ಹಾಡು ಇವತ್ತು ದಿವ್ಯ ಅನುಭೂತಿಯನ್ನು ನನಗೆ ಧಾರೆಯೆರೆಯುತ್ತಿದೆ. ವಿಶ್ವವೆಂಬ ವಿರಾಟ್ ವೀಣೆಗೆ ಬರಿ ನಾಕು ನಾಕೆ ತಂತಿ. ನಾನು, ನೀನು, ಆನು ಮತ್ತು ತಾನು. ನಾನು ಎಂದರೆ ಗಂಡು, ನೀನು ಎಂದರೆ ಹೆಣ್ಣು, ಆನು ಎಂದರೆ ಗಂಡು ಹೆಣ್ಣಿನ ಮನೋದೈಹಿಕ ಮಿಲನದಿಂದ ಉದ್ಭವಿಸಿರುವ ಮಗು ಮತ್ತು ತಾನು ಎಂದರೆ ಮೂವರನ್ನೂ ಪೋಷಿಸುತ್ತಿರುವ ನಿಸರ್ಗ ಅಥವಾ ಸೃಷ್ಟಿಕರ್ತ. ನಾಕುತಂತಿಗಳನ್ನು ಬಿಟ್ಟರೆ ವಿಶ್ವವೆಂಬುದು ಜನ್ಮ ತಾಳುತ್ತಿರಲಿಲ್ಲ. ನಾಕುತಂತಿಗಳ ತುಡಿತವೇ ವಿಶ್ವ ವಿಕಸನಕ್ಕೆ ದಾರಿ ಮಾಡಿಕೊಟ್ಟಿದೆ. ನಾಕುತಂತಿಗಳ ಮಿಡಿತವೇ ವಿಶ್ವ ಕೇಂದ್ರಕ್ಕೆ ಭದ್ರ ಬುನಾದಿಯನ್ನು ಒದಗಿಸಿದೆ. ನಾಕುತಂತಿಗಳ ಕಲಹದಿಂದ ಸಂಭವಿಸಿರುವ ಹೋರಾಟವೇ ವಿಶ್ವದ ಇತಿಹಾಸವಾಗಿ ರೂಪಗೊಂಡಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ನೋಡಿದಾಗಲೂ ಇದು ನಿಜವೆನ್ನಿಸುತ್ತದೆ. ತಾತ್ವಿಕ ನೆಲೆಗಟ್ಟಿನಲ್ಲಿ ನೋಡಿದಾಗಲೂ ಇದು ಸತ್ಯವೆನ್ನಿಸುತ್ತದೆ. ಮಹೋನ್ನತ ಕವಿತೆಯನ್ನು ಕರುಣಿಸಿದ 'ಬೇಂದ್ರೆ' ಎಂಬ ನಿಗೂಢ ದಾರ್ಶನಿಕನಿಗೆ ನನ್ನ ಕೋಟಿ ನಮನ.

ಆವು ಈವಿನ
ನಾವು ನೀವಿಗೆ
ಆನು ತಾನದ
ತನನನಾ...
ನಾನು ನೀನಿನ
ನೀನಾನಿಗೆ
ಬೇನೆ ಏನೋ?
ಜಾಣಿನಾ...
ಚಿತ್ತೀಮಳಿ, ತತ್ತಿ ಹಾಕತಿತ್ತು
ಸ್ವಾತಿ ಮುತ್ತಿನೊಳಗ
ಸತ್ತಿಯೋ ಮಗನ
ಅಂತ ಕೂಗಿದರು
ಸಾವೀ ಮಗಳು, ಭಾವಿ ಮಗಳು ಕೂಡಿ
ಜಗ, ಅಪ್ಪಾ ಅಮ್ಮನ ಮಗ
ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ
ನಾ ಅವರ ಕಂದ
ಶ್ರೀ ಗುರುದತ್ತ ಅಂದ

ನಾಕುತಂತಿ ಅಂಬಿಕಾತನಯದತ್ತ
ಮೂಲ: ಅಂತರ್ಜಾಲ

Wednesday, August 13, 2014

ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ

ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ
ಚುಂಬಕ ಗಾಳಿಯು ಬೀಸುತಿದೆ 
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ

ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ

ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ಧಾರೆಯ ಮಸೆಯಿಸಿತು

ಅಕ್ಷಿನಿಮೀಲನ ಮಾಡದೆ ನಕ್ಷತ್ರದ
ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ

ದ.ರಾ. ಬೇಂದ್ರೆ
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ (ಪಂ|| ಭೀಮಸೇನ ಜೋಷಿ)
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ (ಪಿ.ಬಿ. ಶ್ರೀನಿವಾಸ್ ಮತ್ತು ಪಿ. ಸುಶೀಲ)

Monday, March 31, 2014

ಯುಗ ಯುಗಾದಿ ಕಳೆದರೂ

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ

ಹೊಂಗೆ ಹೂವ ತೊಂಗಳಲಿ
ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೆ
ಬೇವಿನ ಕಹಿ ಬಾಳಿನಲಿ
ಹೂವಿನ ನಸುಗಂಪು ಸೂಸಿ
ಜೀವಕಳೆಯ ತರುತಿದೆ

ವರುಷಕೊಂದು ಹೊಸತು ಜನ್ಮ
ಹರುಷಕೊಂದು ಹೊಸತು ನೆಲೆಯು
ಅಖಿಲ ಜೀವಜಾತಕೆ
ಒಂದೇ ಒಂದು ಜನ್ಮದಲಿ
ಒಂದೇ ಬಾಲ್ಯ, ಒಂದೇ ಹರೆಯ
ನಮಗದಷ್ಟೇ ಏತಕೋ

ನಿದ್ದೆಗೊಮ್ಮೆ ನಿತ್ಯ ಮರಣ
ಎದ್ದ ಸಲ ನವೀನ ಜನನ
ನಮಗೆ ಏಕೆ ಬಾರದು?
ಎಲೆ ಸನತ್ಕುಮಾರ ದೇವ
ಎಲೆ ಸಾಹಸಿ ಚಿರಂಜೀವ
ನಿನಗೆ ಲೀಲೆ ಸೇರದೂ

ಯುಗ ಯುಗಗಳು ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ 

ದ.ರಾ. ಬೇಂದ್ರೆ
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

Monday, October 21, 2013

ನಾನು ಬಡವಿ ಆತ ಬಡವ

ನಾನು ಬಡವಿ ಆತ ಬಡವ
ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು
ಅದಕು ಇದಕು ಎದಕು

ಹತ್ತಿರಿರಲಿ ದೂರವಿರಲಿ
ಅವನೆ ರಂಗಸಾಲೆ
ಕಣ್ಣು ಕಟ್ಟುವಂಥ ಮೂರ್ತಿ
ಕಿವಿಗೆ ಮೆಚ್ಚಿನೋಲೆ

ಚಳಿಗೆ ಬಿಸಿಲಿಗೊಂದೆ ಹದ
ಅವನ ಮೈಯ ಮುಟ್ಟೆ
ಅದೇ ಗಳಿಗೆ ಮೈಯ ತುಂಬಾ
ನನಗೆ ನವಿರು ಬಟ್ಟೆ
ಆತ ಕೊಟ್ಟ ವಸ್ತು ಒಡವೆ
ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂದಿ
ಕೆನ್ನೆ ತುಂಬಾ ಮುತ್ತು

ಕುಂದು ಕೊರತೆ ತೋರಲಿಲ್ಲ
ಬೇಕು ಹೆಚ್ಚಿಗೇನು?
ಹೊಟ್ಟೆಗಿತ್ತ ಜೀವ ಫಲವ
ತುಟಿಗೆ ಹಾಲು ಜೇನು

ದ.ರಾ. ಬೇಂದ್ರೆ
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ